ಮೈಸೂರು: ಮೈಸೂರು ನಗರ ಸಿಸಿಬಿ ಪೊಲೀಸರು ಪಡೆದ ಖಚಿತ ಮಾಹಿತಿಯ ಮೇರೆಗೆ ದಿನಾಂಕ 03/02/2026 ರಂದು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾತಗಳ್ಳಿಯಲ್ಲಿರುವ ಮೂನ್ ಬಕ್ಸ್ ಕೆಫೆ ಸಮೀಪ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ರೂ.1,20,000/- ಮೌಲ್ಯದ 11 ಗ್ರಾಂ 90 ಮಿಲಿಗ್ರಾಂ ತೂಕದ ಎಂಡಿಎಂಎ (MDMA) ಮಾದಕ ಪದಾರ್ಥವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಅಮೀರ್ ಖಾನ್, ಸೈಯದ್ ಇಮ್ರಾನ್ ಹಾಗೂ ಮಹಮ್ಮದ್ ನಬೀಲ್ ಎಂದು ಗುರುತಿಸಲಾಗಿದೆ. ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ತಂಡ ಕಾರ್ಯಾಚರಣೆ ನಡೆಸಿದ್ದು, ಯಶಸ್ವಿಯಾಗಿ ಆರೋಪಿಗಳನ್ನು ಬಂಧಿಸಿದೆ.
ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ. ತನಿಖೆಯ ವೇಳೆ ಆರೋಪಿಗಳ ಮಾದಕ ವಸ್ತು ಜಾಲ, ಸರಬರಾಜು ಮೂಲ ಹಾಗೂ ಇತರ ಸಂಪರ್ಕಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂರು ಆರೋಪಿಗಳ ಪೈಕಿ ಅಮೀರ್ ಖಾನ್ ಎಂಬಾತನ ವಿರುದ್ಧ ಈ ಹಿಂದೆ ಕೂಡ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ನಗರದಲ್ಲಿ ಮಾದಕ ವಸ್ತುಗಳ ಹಾವಳಿ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಠಿಣ ಕ್ರಮ ಮುಂದುವರಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.



